ನವದೆಹಲಿ : ಉಕ್ರೇನ್ ಮೇಲೆ ಆಕ್ರಮಣ ನಡೆಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ 2ನೇ ಬಾರಿ ದೂರವಾಣಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.
ಉಭಯ ದೇಶಗಳ ನಾಯಕರು ಉಕ್ರೇನ್ನಲ್ಲಿನ ಸಧ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ನ ಪ್ರಮುಖ ನಗರವೂ ಆದ ಖಾರ್ಕಿವ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರ ಸುರಕ್ಷಿತ ಸ್ಥಳಾಂತರ ಕುರಿತು ಪುಟಿನ್ ಅವರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ.
ಉಕ್ರೇನ್ನ ಯುದ್ಧಪೀಡಿತ ಪ್ರದೇಶಗಳಿಂದ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತು ಪುಟಿನ್ ಅವರಿಗೆ ಮೋದಿ ಮನವರಿಕೆ ಮಾಡಿದ್ದಾರೆ. ಯಾವುದೇ ತೊಂದರೆ ಇಲ್ಲದೇ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ವಿಚಾರವಾಗಿ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ.
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಬಳಿಕ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಖಂಡಿಸುವ ನಿರ್ಣಯದಿಂದ ಭಾರತ ತಟಸ್ಥವಾಗಿ ಉಳಿದಿದೆ.