ಬೆಂಗಳೂರು : ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಸಹಿತ ಮಿಂಚು ಜೊತೆಗೆ ಸಾಧಾರಣ ಮಳೆಯ ಜೊತೆಗೆ ರಭಸದ ಗಾಳಿಯ ವೇಗ 30-40 ಕಿಮೀ ವೇಗವನ್ನು ತಲುಪುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ , ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.