ಬೆಂಗಳೂರು : ರಾಜ್ಯದ ಕೆಲವು ರೆಸಿಡೆನ್ಷಿಯಲ್ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ಮುಂಜಾಗ್ರತೆ ಕ್ರಮವಾಗಿ ರೆಸಿಡೆನ್ಷಿಯಲ್ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ʼಪಬ್ಲಿಕ್ ಟಿವಿʼ ಜೊತೆ ಈ ಕುರಿತು ಮಾತನಾಡಿದ ಅವರು, ಕೆಲವು ವಸತಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಗೆ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್ ಮಾಡುವುದಿಲ್ಲ. ಆನ್ಲೈನ್ ತರಗತಿಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಿಸುವುದಿಲ್ಲ. ಆದ್ದರಿಂದ ಶಾಲಾ-ಕಾಲೇಜು ಬಂದ್ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.