ಮೈಸೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದೆ. ಇದೇ ವೇಳೆ ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಸಾಧನೆಯನ್ನ ಕೈಪಿಡಿ ಮೂಲಕ ಹೊರತರಲಾಗಿದೆ.
ಗೃಹಲಕ್ಷ್ಮಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಬಾರಿಯೂ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು 5 ವರ್ಷಗಳಲ್ಲಿ ಈಡೇರಿಸುತ್ತೇವೆ ಎನ್ನುವ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.
ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಇದನ್ನ ನೆರವೇರಿಸಲು ಸಾಧ್ಯವಿಲ್ಲ ಅಂತ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಟೀಕೆ ಮಾಡಿದವು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತೆ ಅಂತಾ ಹೇಳಿದ್ದರು. ಆದ್ರೆ ನಾವಿಂದು ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ.
ಯುವನಿಧಿ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ಬರುತ್ತದೆ. ಆದ್ರೆ ಕರ್ನಾಟಕ ದಿವಾಳಿ ಆಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಗಳೂ ಸಹ ನಿಂತಿಲ್ಲ ಎಂದು ತಿರುಗೇಟು ನೀಡಿದರು.